Weather: ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ
ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವೆಡೆ ಮಂಜು ಹಾಗೂ ಒಣ ಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ..
ಯೆಲ್ಲೋ ಅಲರ್ಟ್
ದಾವಣಗೆರೆ, ಹಾವೇರಿ,ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತದಲೆಯ ಪ್ರಮಾಣ ಹೆಚ್ಚಿದೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಮುಂದಿನ 24 ರಿಂದ 48 ಗಂಟೆಯವರೆಗೆ ಇದೇ ತಾಪಮಾನ ಮುಂದುವರೆಯಲಿದೆ. ಬೆಚ್ಚಗಿನ ಉಡುಪು ಧರಿಸಿ ಸುರಕ್ಷಿತವಾಗಿರುವಂತೆ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಸೇರಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಇದನ್ನು ಓದಿ: Gold: ಚಿನ್ನ ಬೆಳ್ಳಿ ದರದಲ್ಲಿ ಮತ್ತೆ ಏರಿಕೆ