Chikkamagaluru: ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಕಟೌಟ್‌ನ ವಿಡಿಯೋವೊಂದಕ್ಕೆ ಪಾಕಿಸ್ತಾನಿ ಹಾಡು ಬಳಕೆ ಮಾಡಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

Chikkamagaluru:ಆಗಸ್ಟ್ 26ರಂದು ಈದ್ ಮಿಲಾದ್ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಟಿಪ್ಪು ನಗರದಲ್ಲಿ ಸುಮಾರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ.
ಈ ಕಟೌಟ್‌ನ ವಿಡಿಯೋವನ್ನು ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ Instagram ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ವಿಡಿಯೋದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಕಾಣಿಸಿಕೊಂಡಿದ್ದು, ಹಿನ್ನೆಲೆಗೆ ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ದೇಶವಿರೋಧಿ ಹಾಡು ಬಳಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಈ ಕುರಿತು ಚರ್ಚೆ ಹಾಗೂ ಆಕ್ಷೇಪಗಳು ವ್ಯಕ್ತವಾಗಿವೆ.
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ವಿಡಿಯೋಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಕುರಿತು ಪೊಲೀಸರು ಪರಿಶೀಲನೆ ನಡೆಸಿ, ಅದರ ಸತ್ಯಾಸತ್ಯತೆ ಹಾಗೂ ವಿಡಿಯೋವನ್ನು ಸೃಷ್ಟಿಸಿ ಹಂಚಿಕೊಂಡವರ ಕುರಿತು ಮಾಹಿತಿ ಸಂಗ್ರಹಿಸುವ ನಿರೀಕ್ಷೆಯಿದೆ.