Sagara: ಕಡಿಮೆ ಅಂಕ ಪಡೆದಿದ್ದಕ್ಕೆ ಮಕ್ಕಳಿಗೆ ಕೋಲಿನಿಂದ ಥಳಿತ; ಅತಿಥಿ ಶಿಕ್ಷಕಿ ವಜಾ

Sagara: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮೂರು ವಿದ್ಯಾರ್ಥಿಗಳಿಗೆ ಕೋಲಿನಿಂದ ಹೊಡೆದಿರುವ ಅತಿಥಿ ಶಿಕ್ಷಕಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಈ ಘಟನೆ ನಡೆದಿರುವಂತಹದ್ದು.
ಮಕ್ಕಳ ಬೆನ್ನಿನಲ್ಲಿ ಗಾಯಗಳಾಗಿರುವುದು ತಿಳಿದುಬಂದಿದ್ದು, ಘಟನೆಗೆ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯೂ ಅತಿಥಿ ಶಿಕ್ಷಕಿಯನ್ನು ಸೇವೆಯಿಂದ ವಜಾಗೊಳಿಸಿದೆ.
ಕಡಿಮೆ ಅಂಕಕ್ಕೆ ಮಕ್ಕಳಿಗೆ ಥಳಿತ
ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶದಲ್ಲಿರುವ ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುವಾಸೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕಿ ರಕ್ಷಿತಾ ಎಂಬುವವರು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 2, 3 ಮತ್ತು 4ನೇ ತರಗತಿಯ ಮೂವರು ವಿದ್ಯಾರ್ಥಿಗಳನ್ನು ಕೋಲಿನಿಂದ ಥಳಿಸಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳು ಶಾಲೆಯಿಂದ ಮನೆಗೆ ಮರಳಿದ ಬಳಿಕ ಅವರ ಬೆನ್ನಿನ ಮೇಲೆ ಗಾಯದ ಗುರುತುಗಳು ಹಾಗೂ ರಕ್ತದ ಕಲೆಗಳನ್ನು ಪೋಷಕರು ಗಮನಿಸಿದ್ದಾರೆ. ಇದರಿಂದ ಆತಂಕಗೊಂಡ ಪೋಷಕರು ಮಕ್ಕಳನ್ನು ವಿಚಾರಿಸಿದಾಗ, ಶಿಕ್ಷಕಿ ಹೊಡೆದಿರುವ ವಿಚಾರ ಬೆಳಕಿಗೆ ಬಂದಿದೆ.
ಈ ವಿಷಯ ತಿಳಿದಂತಹ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗ ಡಿಡಿಪಿಐ ಎಸ್.ಆರ್. ಮಂಜುನಾಥ್ ಅವರು ಕ್ರಮ ಕೈಗೊಂಡಿದ್ದಾರೆ. ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಅತಿಥಿ ಶಿಕ್ಷಕಿ ರಕ್ಷಿತಾ ಅವರನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಲಾಗಿದೆ.
ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಾಗಿದೆ.
ಶಾಲೆಗಳಲ್ಲಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ದೈಹಿಕ ಶಿಕ್ಷೆ ಅಥವಾ ಮಾನಸಿಕ ಹಿಂಸೆ ನೀಡಬಾರದು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇಂತಹ ಘಟನೆಗಳು ಮರುಕಳಿಸಿದರೆ, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಡಿಪಿಐ ಶಿಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ.
Read this: IBPS RRB 2026:13,706 ಬ್ಯಾಂಕಿಂಗ್ ಹುದ್ದೆಗಳು; ಸೆ.21ರೊಳಗೆ ಅರ್ಜಿ