Rain: ಕರ್ನಾಟಕದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು; 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Rain: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಕೆಲವೆಡೆ ಗುಡುಗು, ಸಿಡಿಲಿನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳ ಕರಾವಳಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಚಾಮರಾಜನಗರ, ಮೈಸೂರು ಹಾಗೂ ಶಿವಮೊಗ್ಗದ ಮಲೆನಾಡು ಭಾಗಗಳಲ್ಲೂ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ.
ಇನ್ನು ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗದ ಕೆಲವು ಭಾಗಗಳಲ್ಲೂ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳ ಪೈಕಿ ಹಾವೇರಿ, ಗದಗ ಹಾಗೂ ಧಾರವಾಡದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ ದಿನಗಳಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
Read this: Koppa: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ; ಯುವತಿ ಆತ್ಮಹತ್ಯೆ